ಅನಂತವ್ರತ ಮಹತ್ವ ~ ಕೆ .ಎಲ್ .ಕುಂಡಂತಾಯ

ಅನಂತಾನಂತ ದೇವೇಶ​…ಕ್ಷೀರಸಾಗರದಲ್ಲಿ ಮಹಾಶೇಷನ ಮೇಲೆ ಮಲಗಿರುವ ಶ್ರೀಮನ್ನಾರಾಯಣ’ ಈ  ಸನ್ನಿವೇಶದ‌ ಯಥಾವತ್ತಾದ ಪರಿಕಲ್ಪನೆಯೊಂದಿಗೆ ನೆರವೇರುವ ಉಪಾಸನೆಯ ಅಲೌಕಿಕ ಅನುಸಂಧಾನವೇ ‘ಶ್ರೀಮದನಂತವ್ರತ’ , ‘ಅನಂತವ್ರತ, ಅಥವಾ ‘ನೋಂಪು’.  ಭಾದ್ರಪದ ಶುದ್ಧ ಚತುರ್ದಶಿ ತಿಥಿಯಲ್ಲಿ ‘ಅನಂತ ಚತುರ್ದಶಿ’ ಆಚರಣೆ. ಇದು ವ್ರತವಾಗಿ ನೆರವೇರುತ್ತದೆ. 

ಕ್ಷೀರ ಸಾಗರವನ್ನು ಸಾಂಕೇತಿಸುವ ಜಲ ಪೂರಿತ ಕಲಶ. ಅದರ ಮೇಲೆ ದರ್ಭೆಯಿಂದ ನಿರ್ಮಿಸಿರುವ ಏಳು ಹೆಡೆಯುಳ್ಳ ಶೇಷಾಕೃತಿ ಈ ಶೇಷಾಕೃತಿಯ ಮೇಲೆ ಶಾಲಗ್ರಾಮ.​ ​ಈ ಪರಿಕಲ್ಪನೆಯಲ್ಲಿ ಅನಂತನಾಮಕನಾದ ಶೇಷನ ಮೇಲೆ ಶಯನ ಮಾಡಿದ ಅನಂತ ಪದ್ಮನಾಭನ ಚಿಂತನೆಯೊಂದಿಗೆ ಆರಾಧನೆ ನೆರವೇರುವುದು ವೈಕುಂಠವನ್ನೆ ಸಾಕಾರ ಗೊಳಿಸುವ, ವಾಸ್ತವದ ಸ್ಥಾಪನೆಯಾಗಿ ವ್ರತ ನಡೆಯುವುದು. ಲೌಕಿಕದಲ್ಲಿ ಅಲೌಕಿಕವನ್ನು ನಿರ್ಮಿಸುವ ವೈದಿಕದ ಉಪಾಸನಾ ವಿಧಾನ ಅದ್ಭುತ. 

ಹದಿನಾಲ್ಕು ಗಂಟುಗಳುಳ್ಳ ಕೆಂಪು ಬಣ್ಣದ “ದಾರ ಅಥವಾ ದೋರ”ವನ್ನು ಪ್ರತಿಷ್ಠಾಪಿತ ಕಲಶದಲ್ಲಿ ಇರಿಸಿ ಪೂಜಾನಂತರದಲ್ಲಿ ಧರಿಸಿ ಕೊಳ್ಳುವುದು ಅನಂತವ್ರತದ ಮುಖ್ಯ ಅಂಗ.​ ​ಪುರುಷರಾದರೆ ಬಲಕೈಯ ತೋಳಿನಲ್ಲಿ, ಸ್ತ್ರೀಯರಾದರೆ ಎಡಕೈಯ ತೋಳಿ ನಲ್ಲಿ ಕಟ್ಟಿಕೊಳ್ಳುವುದು ಸಂಪ್ರದಾಯ .
          ​​
ಸಂಕ್ಷಿಪ್ತ ಅನಂತ ವ್ರತಕಥಾ: ಕಪಟ ದ್ಯೂತದ ಪರಿಣಾಮವಾಗಿ ವನವಾಸಕ್ಕೆ ದ್ರೌಪದಿ ಸಹಿತ​ ಪಾಂಡವರು ಹೊರಡುತ್ತಾರೆ. ವಿಷಯ ತಿಳಿದ ಕೃಷ್ಣ ಕಾಡಿಗೆ ಬರುತ್ತಾನೆ. ಒದಗಿದ ಕಷ್ಟ ಪರಂಪರೆಗೆ ನಿವೃತ್ತಿ ಹೇಗೆ ಎಂದು ಧರ್ಮರಾಯನು ಕೇಳಲು​, ಶ್ರೀಕೃಷ್ಣನು ‘ಅನಂತವ್ರತ’ವನ್ನು ಮಾಡುವಂತೆ ಸೂಚಿಸುತ್ತಾನೆ. 

ಸುಮಂತನು ತನ್ನ ಮಗಳನ್ನು ಕೌಂಡಿನ್ಯನೆಂಬ ಮಹರ್ಷಿಗೆ ಗೃಹ್ಯಸೂತ್ರದ ಕ್ರಮದಲ್ಲಿ  ಮದುವೆಮಾಡಿ ಕೊಡುತ್ತಾನೆ​. ನವ​ ​ವಧೂವರರಿಗೆ ಬಳುವಳಿಯಾಗಿ ಉತ್ತಮ ವಸ್ತುವನ್ನು ಕೊಡಬೇಕೆಂದು ಬಯಸಿ ಪತ್ನಿಯಲ್ಲಿ ಹೇಳಲು,​ ​ಆಕೆ ಕೋಪಗೊಂಡು ಮನೆಯಲ್ಲಿದ್ದ ಸುವಸ್ತುಗಳನ್ನೆಲ್ಲ ಪೆಟ್ಟಿಗೆಯಲ್ಲಿ ಹಾಕಿ ಬಚ್ಚಿಡುತ್ತಾಳೆ. ಕೌಂಡಿನ್ಯನು‌ ತನ್ನ ಶಿಷ್ಯರ ಸಹಿತ  ನವ ವಧುವಿನೊಂದಿಗೆ ಹೊರಡುತ್ತಾನೆ. ಬರಬರುತ್ತಾ ಯಮುನಾ ನದಿಯ ದಡದಲ್ಲಿ ಮಧ್ಯಾಹ್ನದ ಆಹ್ನಿಕಕ್ಕಾಗಿ‌ ಪ್ರಯಾಣವನ್ನು ನಿಲ್ಲಿಸಿ  ಅನುಷ್ಠಾನ ಪೂರೈಸಲು ನದಿ ಬದಿಗೆ ಹೋಗುತ್ತಾನೆ .

ನವ ವಧು ಶೀಲೆಯು ಹೊಳೆ ಬದಿ ಹೋಗುತ್ತಾ ಕೆಂಪುಬಟ್ಟೆಯನ್ನು ಧರಿಸಿದ ಹೆಂಗಸರ ಗುಂಪು  ಅನಂತ ವ್ರತದಲ್ಲಿ ತೊಡಗಿರುವುದನ್ನು ಕಾಣುತ್ತಾಳೆ. ವ್ರತದ ವಿವರವನ್ನು ತಿಳಿದುಕೊಂಡ ಶೀಲೆ ತಾನು ವ್ರತ ಮಾಡಲು ಸಿದ್ಧಳಾಗುತ್ತಾಳೆ. ಆಗ ಹೆಂಗಸರು  ವ್ರತವಿಧಿಯನ್ನು ಹೇಳುತ್ತಾರೆ. ಈ ವ್ರತ ವಿಧಿಯಲ್ಲಿ ಅನಂತನು ಪೂಜಿಸಲ್ಪಡುತ್ತಾನೆ. 

ಒಂದು ಸೇರು ಅಕ್ಕಿಯಿಂದ ಪುರುಷನಾಮಕನಾದ ಪರಮಾತ್ಮನ ನಿಮಿತ್ತದಿಂದ ಪಾಕಮಾಡಿ ಅನಂತನಿಗರ್ಪಿಸಿ‌ ಅರ್ಧವನ್ನು ಬ್ರಾಹ್ಮಣನಿಗೆ ದಾನಮಾಡಿ ಉಳಿದರ್ಧವನ್ನು‌ ತಾನು ಭೋಜನಮಾಡಬೇಕು.​ ​ದ್ರವ್ಯದಲ್ಲಿ‌ ವಂಚನೆಮಾಡದೆ ತನ್ನ ಶಕ್ತಿಯಿದ್ದಷ್ಟು ದಕ್ಷಿಣೆ ಕೊಡಬೇಕು.​ ​ನದಿಯ ದಡದಲ್ಲಿ‌‌ ಅನಂತನನ್ನು‌ ಪೂಜಿಸಬೇಕು ದರ್ಭೆಯಿಂದ ಶೇಷನ ಪ್ರತಿಮೆಯನ್ನುಮಾಡಿ ಬಿದಿರಿನ ಪಾತ್ರದಲ್ಲಿಟ್ಟು ಸ್ನಾನಮಾಡಿ‌ ಮಂಡಲದ ಮೇಲೆ ಗಂಧ ,ಪುಷ್ಪ‌,​ ​ಧೂಪ‌,ದೀಪ‌ಗಳಿಂದ ಅನೇಕ‌ವಿಧಿ ಪಕ್ವಾನ್ನಗಳಿಂದೊಡಗೂಡಿದ ನೈವೇದ್ಯಗಳಿಂದ ದೇವರ ಮುಂಭಾಗದಲ್ಲಿ‌ ಕುಂಕುಮದಿಂದ ಕೆಂಪಾದ ದೃಢವಾದ ಹದಿನಾಲ್ಕು ಗಂಟುಗಳುಳ್ಳ‌ ದೋರವನ್ನಿಟ್ಟು‌ ಪೂಜಿಸಬೇಕು 

ಸಂಸಾರವೆಂಬ ಮಹಾಸಮುದ್ರದಲ್ಲಿ‌ ಮುಳುಗಿದ್ದ ನನ್ನನ್ನು ,ಎಲೈ ,ಅನಂತನೆ‌,​ ವಾಸುದೇವನೆ ಉದ್ಧರಿಸು ,ನಾಶವಿಲ್ಲದ ನಿನ್ನ ರೂಪದಲ್ಲಿ ನನ್ನನ್ನು ವಿನಿಯೋಗಿಸು , ಸಾರೂಪ್ಯವೆಂಬ ಮೋಕ್ಷವನ್ನು ಕೊಡು .ಅನಂತರೂಪಿಯಾದ ನೀನು‌ ಈ ಸೂತ್ರದಲ್ಲಿ ಸನ್ನಿಹಿತನಾಗಿರುವೆ ,ನಿನಗೆ ನಮಸ್ಕಾರ ” ಎಂಬ ಮಂತ್ರದಿಂದ ದೋರವನ್ನು ಕಟ್ಟಿಕೊಳ್ಳಬೇಕು . ಹೀಗೆ ದೋರವನ್ನು ಕಟ್ಟಿಕೊಂಡ ಶೀಲೆಯು ಮನೆಗೆ ಬರಲಾಗಿ ಮನೆಯು ಧನ ದಾನ್ಯಗಳಿಂದ ತುಂಬಿತ್ತು, ಒಂದು ದಿನ ಕೌಂಡಿನ್ಯನು ಶೀಲೆಯ ತೋಳಿನಲ್ಲಿದ್ದ ದೋರ ವನ್ನು‌ ಕಂಡು ಕುಪಿತನಾಗಿ “ನನ್ನನ್ನು ವಶೀಕರಿಸಿಕೊಳ್ಳಲು‌ ಇದನ್ನು ಕಟ್ಟಿಕೊಂಡಿರುವೆಯಾ” ಎಂದು ಮೂದಲಿಸುತ್ತಾ ದೋರವನ್ನು ಕಿತ್ತು ಬೆಂಕಿಗೆ ಹಾಕುತ್ತಾನೆ .‌  ಆ​ ​ಕ್ಷಣ ಶೀಲೆಯು ದೋರವನ್ನು ಬೆಂಕಿಯಿಂದ ತೆಗೆದು ಹಾಲಿಗೆ ಹಾಕುತ್ತಾಳೆ .
 

[ಪ್ರಸ್ತುತ ವ್ರತಾಚರಣೆಯಲ್ಲಿ ತೊಡಗುವವರು, ಕಳೆದ ವರ್ಷ ಆರಾಧಿಸಿ ಕಟ್ಟಿಕೊಂಡ ದೋರವನ್ನು ಮತ್ತೆ ಕಟ್ಟಿಕೊಂಡು ,ಕಲ್ಪೋಕ್ತ ಪೂಜೆಯನ್ನು ನೆರವೇರಿಸಿ ಬಳಿಕ‌ ನೂತನವಾಗಿ ಪೂಜಿಸಲ್ಪಟ್ಟ ದೋರವನ್ನು‌ ಕಟ್ಟಿಕೊಂಡು ಹಳೆದೋರವನ್ನು‌ ಬಿಚ್ಚಿ ಹಾಲಿಗೆ ಹಾಕುವ ವಿಧಿ ಪೂಜಾಕ್ರಮದ ಅವಿಭಾಜ್ಯ ಅಂಗವಾಗಿದೆ.]

 ಇಂತಹ ಘಟನೆಯಿಂದ ಸಕಲ‌ಸಂಪತ್ತನ್ನು ಕೌಂಡಿನ್ಯನು‌ ಕಳೆದುಕೊಂಡು ನಿರ್ಗತಿಕನಾದನು. ಎಂದು ಶ್ರೀಕೃಷ್ಣನು ಧರ್ಮರಾಯನಿಗೆ ವಿಸ್ತಾರವಾದ ಕಥೆಯನ್ನು ಹೇಳುತ್ತಾ  ಕೌಂಡಿನ್ಯನು ಅನಂತನನ್ನು ಹುಡುಕಿ ಹೊರಟು ಕೊನೆಗೆ ಹೇಗೆ ಮರಳಿ ವ್ರತವನ್ನು ಮಾಡಿ ಅನಂತನ ಅನುಗ್ರಹದಿಂದ ಕಳಕೊಂಡ ಸಂಪತ್ತನ್ನು ಪಡೆದು ಬಾಳಿ ಬದುಕಿ ವೈಕುಂಠವನ್ನು ಸಿದ್ಧಿಸಿಕೊಂಡ ಎಂಬ ವಿವರವನ್ನು ಹೇಳುತ್ತಾನೆ .

ಬಹಳಷ್ಟು ಮನೆಗಳಲ್ಲಿ ನೋಂಪು ವ್ರತಾಚರಣೆ ಶತಮಾನಗಳಿಂದ ನಡೆದುಬಂದಿದೆ,​ ​ಶ್ದಧಾಭಕ್ತಿಯಿಂದ ಆಚರಿಸಲಾಗುತ್ತಿದೆ. ಈ ಪರ್ವ ವ್ರತವಾಗಿ ನೆರವೇರುತ್ತದೆ ​​ಪ್ರಸಿದ್ಧ ವಿಷ್ಣು ದೇವಾಲಯಗಳಲ್ಲಿ,​ ​ಅನಂತ ಪದ್ಮನಾಭ ದೇವಳಗಳಲ್ಲಿ ಅನಂತವ್ರತ ​ಸಂಭ್ರಮ ದಿಂದ ನಡೆಯುತ್ತದೆ.

           

 
 
 
 
 
 
 
 
 
 
 

Leave a Reply