Janardhan Kodavoor/ Team KaravaliXpress
25.6 C
Udupi
Wednesday, August 17, 2022
Sathyanatha Stores Brahmavara

ಏಡ್ಸ್ ತಡೆಗೆ ಜಾಗೃತಿ ಮೂಡಿಸುವುದು ಅಗತ್ಯ- ಜಿಲ್ಲಾಧಿಕಾರಿ ಜಿ. ಜಗದೀಶ್

ಉಡುಪಿ:  ಏಡ್ಸ್ ಸೋಂಕು ತಡೆಗಟ್ಟಲು, ಸೋಂಕು ಹರಡುವಿಕೆ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಹೇಳಿದರು.
ಅವರು ಇಂದು ನಗರದ ಪುರಭವನದಲ್ಲಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಮಹಾವಿದ್ಯಾಲಯ ರೆಡ್‌ಕ್ರಾಸ್ ಮತ್ತು ಎನ್.ಎಸ್.ಎಸ್ ಘಟಕ ಉದ್ಯಾವರ, ನಾಗರಿಕ ಸಹಾಯವಾಣಿ ಕೇಂದ್ರ ಜಿಲ್ಲಾ ಆಸ್ಪತ್ರೆ ಉಡುಪಿ ಹಾಗೂ ಉದ್ಭವ ಶೈಕ್ಷಣಿಕ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ ಬೆಂಗಳೂರು, ಇವರ ಸಂಯುಕ್ತ ಆಶ್ರಯದಲ್ಲಿ ಹೆಚ್.ಐ.ವಿ ಸೋಂಕಿನ ತಡೆಗಾಗಿ ಜಾಗತಿಕ ಒಗ್ಗಟ್ಟು ಹಾಗೂ ಜವಾಬ್ದಾರಿ ಹಂಚಿಕೆ ಎಂಬ ಘೋಷ ವಾಕ್ಯದೊಂದಿಗೆ ನಡೆದ ವಿಶ್ವ ಏಡ್ಸ್ ದಿನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯು ಏಡ್ಸ್ ಸೋಂಕು ನಿಯಂತ್ರಣದಲ್ಲಿ ರಾಜ್ಯದಲ್ಲಿಯೇ ಮೊದಲ ಸ್ಥಾನ ಪಡೆದಿದೆ. ಹೆಚ್.ಐ.ವಿ ಸೋಂಕಿನ ಬಗ್ಗೆ ಜನಸಾಮಾನ್ಯರಲ್ಲಿ ಆರೋಗ್ಯದ ತಿಳುವಳಿಕೆ ಮತ್ತು ಕೊರತೆ ಇದ್ದು, ಸಾರ್ವಜನಿಕರಲ್ಲಿ ಏಡ್ಸ್ ನಿಯಂತ್ರಣ ಕುರಿತು ಹೆಚ್ಚಿನ ಅರಿವು ಮೂಡಿಸಿ, ಏಡ್ಸ್ ಸೋಂಕಿಗೆ ಬಲಿಯಾಗುವವರ ಸಂಖ್ಯೆ ಕಡಿಮೆಯಾಗಬೇಕು ಎಂದರು.
ಹೆಚ್.ಐ.ವಿ ಬಾಧಿತರನ್ನು ಯಾವುದೇ ತಾರತಮ್ಯ ಮಾಡದೇ ಗೌರವದಿಂದ ಕಾಣಬೇಕು. ಹೆಚ್.ಐ.ವಿ ಬಾಧಿತರಿಗೆ ಸರಕಾರದಿಂದ ಹಲವಾರು ಸೌಲಭ್ಯಗಳು ದೊರೆಯುತ್ತಿದ್ದು, ಇದರ ಬಗ್ಗೆ ತಿಳುವಳಿಕೆ ನೀಡಿ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಳ್ಳುವಂತಾಗಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್ ಮಾತನಾಡಿ, ಹೆಚ್.ಐ.ವಿ ಎನ್ನುವುದು ವೈರಸ್ ಮೂಲಕ ಹರಡುವ ರೋಗವಾಗಿದ್ದು, ಮನುಷ್ಯನ ದೇಹದ ರೋಗ ನಿರೋಧಕ ಶಕ್ತಿಯನ್ನು ಹಂತ ಹಂತವಾಗಿ ನಾಶಗೊಳಿಸುವುದರಿಂದ ವಿವಿಧ ರೋಗಗಳಿಗೆ ತುತ್ತಾಗಬೇಕಾಗುತ್ತದೆ. ಆದ್ದರಿಂದ ರೋಗ ಹರಡದಂತೆ ಮುಂಜಾಗೃತಾ ಕ್ರಮವಾಗಿ ರಕ್ತ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. 

ಆಗ ರೋಗದ ಸ್ಥಿತಿಗತಿ ತಿಳಿಯಲು ಸಾಧ್ಯವಾಗುತ್ತದೆ, ಹೆಚ್.ಐ.ವಿ ಏಡ್ಸ್ ಕುರಿತು ಇತ್ತೀಚಿನ ದಿನಗಳಲ್ಲಿ ವ್ಯಾಪಕ ಜಾಗೃತಿ ಕಾರ್ಯಕ್ರಮಗಳು ನಡೆಯುತ್ತಿದ್ದು, ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಆರೋಗ್ಯಕರ ಜೀವನ ಶೈಲಿ ರೂಪಿಸಿಕೊಳ್ಳಬೇಕು ಎಂದರು. 
ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಮಾತನಾಡಿ, ಕಾನೂನಿನ ಅಡಿಯಲ್ಲಿ ಏಡ್ಸ್ ಬಾಧಿತರಿಗೆ ಗೌಪ್ಯತೆಯ ಹಕ್ಕು ನೀಡಲಾಗಿದ್ದು, ಹೆಚ್.ಐ.ವಿ ಏಡ್ಸ್ಗೆ ತುತ್ತಾಗಿರುವ ವ್ಯಕ್ತಿಗೆ ಸಾರ್ವಜನಿಕ ಕ್ಷೇತ್ರದಲ್ಲಾಗಲೀ ಅಥವಾ ಖಾಸಗಿ ಕ್ಷೇತ್ರದಲ್ಲಾಗಲೀ ತಾರತಮ್ಯವಾಗಿದ್ದರೆ, ಕಾನೂನು ರಕ್ಷಣೆಗೆ ಕ್ರಮ ಕೈಗೊಳ್ಳಬಹುದು ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಸುಧೀರ್ ಚಂದ್ರ ಸೂಡ ಮಾತನಾಡಿ, ಏಡ್ಸ್ ಸೋಂಕಿತರಿಗೆ ಮಾನಸಿಕ, ಆರ್ಥಿಕ ಬೆಂಬಲ ನೀಡುವುದು ಅಗತ್ಯವಾಗಿರುತ್ತದೆ. ಏಡ್ಸ್ ರೋಗದ ಕುರಿತು ಜಾಗೃತಿ ಮೂಡಿಸಲು ಕಾಲೇಜುಗಳಲ್ಲಿ ಜನಜಾಗೃತಿ ಆಂದೋಲನ ಕಾರ್ಯಕ್ರಮಗಳು ನಡೆಯುತ್ತಿದ್ದು, ವಿದ್ಯಾರ್ಥಿಗಳು ದುಷ್ಚಟಗಳಿಗೆ ಬಲಿಯಾಗದೇ ಉತ್ತಮ ಆರೋಗ್ಯ ರೂಪಿಸಿಕೊಳ್ಳಲು ಕರೆ ನೀಡಿದರು.
ಜಿಲ್ಲೆಯಲ್ಲಿ ಡಿಸೆಂಬರ್ ತಿಂಗಳಲ್ಲಿ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸಾ ಆಂದೋಲನಾ ಕಾರ್ಯಕ್ರಮವು ನಡೆಯಲಿದ್ದು, ಈ ಕುರಿತು ಭಿತ್ತಿಪತ್ರ ಬಿಡುಗಡೆ ಮಾಡಲಾಯಿತು. ಏಡ್ಸ್ ನಿಯಂತ್ರಣ ಕರ‍್ಯಕ್ರಮದಲ್ಲಿ ಸೇವೆ ಸಲ್ಲಿಸಿದ ಮಹನೀಯರಿಗೆ ಸನ್ಮಾನ ಕಾರ‍್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಸರ್ಜನ್ ಡಾ. ಮಧುಸೂದನ್ ನಾಯಕ್, ಡಾ.ಪ್ರಶಾಂತ ಭಟ್ ಮತ್ತಿತರರು ಉಪಸ್ಥಿತರಿದ್ದರು. ಕೋವಿಡ್ ನೋಡೆಲ್ ಅಧಿಕಾರಿ ಡಾ. ಪ್ರೇಮಾನಂದ ಸ್ವಾಗತಿಸಿದರು, ಮೇಲ್ವಿಚಾರಕ ಮಹಾಬಲೇಶ್ವರ ಎನ್. ವಂದಿಸಿದರು.

ಕಾರ್ಯಕ್ರಮದ ಮೊದಲು ವಿಶ್ವ ಏಡ್ಸ್ ದಿನದ ಪ್ರಯುಕ್ತ ಸರ್ವಿಸ್ ಬಸ್ ಸ್ಟ್ಯಾಂಡ್ನಿಂದ  ಕೆ.ಎಂ. ಮಾರ್ಗವಾಗಿ ಪುರಭವನದವರೆಗೆ ನಡೆದ ಜಾಥಾ ಕಾರ್ಯಕ್ರಮಕ್ಕೆ ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಕಾವೇರಿ ಹಸಿರು ನಿಶಾನೆ ತೋರಿದರು.

- Advertisement -

ಸಂಬಂಧಿತ ಸುದ್ದಿ

Leave a Reply

ಛಾಯಾಂಕಣ

ಇತ್ತೀಚಿನ ಸುದ್ದಿ

error: Content is protected !!