ನ.16-17 ಉಡುಪಿ ಜಿಲ್ಲೆಯಲ್ಲಿ ಬಿಜೆಪಿ ‘ಜನ ಸಂಕಲ್ಪ ಯಾತ್ರೆ’ -ಕುಯಿಲಾಡಿ ಸುರೇಶ್ ನಾಯಕ್

ಬಿಜೆಪಿ ಮಹತ್ವಾಕಾಂಕ್ಷಿ ‘ಜನ ಸಂಕಲ್ಪ ಯಾತ್ರೆ’ಯು ಉಡುಪಿ ಜಿಲ್ಲೆಯ ಬೈಂದೂರು ಮತ್ತು ಕಾಪು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ನ.16 ಮತ್ತು 17ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ನಡೆಯಲಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.

ಅವರು ಅ.19ರಂದು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಅ.29ರಂದು ಬಿಜೆಪಿ ಜಿಲ್ಲಾ ಕಾರ್ಯಕಾರಿಣಿ ಸಭೆಯು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ರಾಜ್ಯದಲ್ಲೇ ವಿನೂತನವಾಗಿ ಜಿಲ್ಲೆಯ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಶಕ್ತಿ ಕೇಂದ್ರಗಳ ಸಭೆಗಳು ಯಶಸ್ವಿಯಾಗಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲಾ 242 ಶಕ್ತಿಕೇಂದ್ರಗಳಲ್ಲಿ 2 ತಿಂಗಳಿಗೊಮ್ಮೆ ನಿರಂತರ ಸಭೆಗಳು ನಡೆಯಲಿವೆ. ಅಲ್ಲದೆ ಸದೃಢ ಪಕ್ಷದ ಸಂಘಟನಾ ದೃಷ್ಟಿಯಿಂದ ನವೆಂಬರ್ ತಿಂಗಳಲ್ಲಿ ಜಿಲ್ಲಾ ವ್ಯಾಪ್ತಿಯ ಎಲ್ಲಾ 1,111 ಬೂತ್ ಗಳಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದ ಪ್ರಮುಖರ ನೇತೃತ್ವದಲ್ಲಿ ಬೂತ್ ಸಭೆಗಳು ನಡೆಯಲಿವೆ ಎಂದು ಕುಯಿಲಾಡಿ ತಿಳಿಸಿದರು.

ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಅಧ್ಯಕ್ಷ ಕೆ.ಉದಯ‌ಕುಮಾರ್ ಶೆಟ್ಟಿ ಮಾತನಾಡಿ ಕಾಂಗ್ರೆಸ್ ಇಂದು ಸೂತ್ರವಿಲ್ಲದ ಗಾಳಿಪಟದಂತಾಗಿದೆ. ಪಕ್ಷ ಸಂಘಟನೆ, ಜನ ಸೇವೆ, ಕಾರ್ಯ ಪದ್ಧತಿ ಮತ್ತು ನಾಯಕತ್ವದ ಮೂಲಕ ಗೆಲುವು ಸಾಧಿಸುವುದು ನಮ್ಮ ಗುರಿಯಾಗಬೇಕು. ಬಿಜೆಪಿಯಿಂದ ರಾಜ್ಯಾದ್ಯಂತ 3 ತಂಡಗಳ ನೇತೃತ್ವದಲ್ಲಿ ‘ಜನ ಸಂಕಲ್ಪ ಯಾತ್ರೆ’ ನಡೆಯುತ್ತಿದ್ದು, ಪಕ್ಷದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರಕಾರದ ವಿವಿಧ ಜನಪರ ಯೋಜನೆಗಳನ್ನು ಇನ್ನಷ್ಟು ಪ್ರಚಲಿತಗೊಳಿಸಿ ಅರ್ಹ ಫಲಾನುಭವಿಗಳಿಗೆ ಪ್ರಯೋಜನವನ್ನು ತಲುಪಿಸುವ ಮೂಲಕ ಸಶಕ್ತ ಬೂತ್ ಸದೃಢ ಸಂಘಟನೆಯೊಂದಿಗೆ ಮಗದೊಮ್ಮೆ ಜಿಲ್ಲೆಯ ಐದೂ ಕ್ಷೇತ್ರಗಳಲ್ಲಿ ಬಿಜೆಪಿ ಪ್ರಚಂಡ ಗೆಲುವು ಸಾಧಿಸಲು ಬದ್ಧತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ ಬೂತ್ ಸಶಸ್ತೀಕರಣ, ಶಕ್ತಿಕೇಂದ್ರಗಳ ಸಭೆ, ಅಭ್ಯಾಸ ವರ್ಗ ಹಾಗೂ ಪಕ್ಷದ ಸಂಘಟನಾತ್ಮಕ ವಿಚಾರಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.

ಅಡಿಕೆ ಕೃಷಿಯಲ್ಲಿ ತೊಡಗಿದ್ದ ಸಂದರ್ಭದಲ್ಲಿ ಆಕಸ್ಮಿಕವಾಗಿ ವಿದ್ಯುತ್ ತಂತಿ ಸ್ಪರ್ಶದಿಂದ ಸಾವಿಗೀಡಾದ ಪಕ್ಷದ ಹಿರಿಯ ಮುಖಂಡ, ಶೀರೂರು ಶಕ್ತಿಕೇಂದ್ರದ ಅಧ್ಯಕ್ಷ ಸತೀಶ್ ಪ್ರಭು ಶೀರೂರು ಇವರ ಅಕಾಲಿಕ ನಿಧನದ ಬಗ್ಗೆ ಸಭೆಯಲ್ಲಿ ಮೌನ ಪ್ರಾರ್ಥನೆಯೊಂದಿಗೆ ಶೃದ್ಧಾಂಜಲಿ ಸಲ್ಲಿಸಲಾಯಿತು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ಎಸ್.ಟಿ. ಮೋರ್ಚಾ ರಾಜ್ಯ ಕಾರ್ಯದರ್ಶಿ ಉಮೇಶ್ ನಾಯ್ಕ್, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಜಿಲ್ಲಾ ಸಂಘಟನಾತ್ಮಕ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ‌ನಿರೂಪಿಸಿ, ವಂದಿಸಿದರು.

 
 
 
 
 
 
 
 
 
 
 

Leave a Reply