ಕವಿ ಚಂದ್ರಶೇಖರ ಪಾಟೀಲ್ (ಚಂ.ಪಾ.) ನಿಧನ

ಕವಿ, ನಾಟಕಕಾರ, ಸಂಘಟನಕಾರ, ಪತ್ರಿಕಾ ಸಂಪಾದಕ, ಕನ್ನಡ ಹೋರಾಟಗಾರ ಹೀಗೆ ವಿಭಿನ್ನ ನೆಲೆಗಳ ಚಂದ್ರಶೇಖರ ಪಾಟೀಲ್ (ಚಂ.ಪಾ.) ನಿಧನರಾಗಿದ್ದಾರೆ.  ಪಾಟೀಲರು ಹುಟ್ಟಿದ್ದು ಹಾವೇರಿ ಜಿಲ್ಲೆಯ ಸವಣೂರು ತಾಲ್ಲೂಕಿನ ಹತ್ತೀಮತ್ತೂರಿನಲ್ಲಿ. ತಂದೆ ಬಸವರಾಜ ಹಿರೇಗೌಡರು, ತಾಯಿ ಮುರಿಗೆವ್ವ. ಚಂದ್ರಶೇಖರ ಪಾಟೀಲರು ಸಾಹಿತ್ಯ ಲೋಕದಲ್ಲಿ ಚಂಪಾ ಎಂಬ ಹೆಸರಿನಿಂದ ಪ್ರಖ್ಯಾತರು. 
ಪಾಟೀಲರ ಪ್ರಾರಂಭಿಕ ಶಿಕ್ಷಣ ಹಾವೇರಿಯಲ್ಲಿ ಮತ್ತು ಪ್ರೌಢಶಿಕ್ಷಣ ಧಾರವಾಡದಲ್ಲಿ ನೆರವೇರಿತು. ಅವರ ತಂದೆಯವರಿಗೆ ಇಂಗ್ಲಿಷ್‌ ಬಗ್ಗೆ ಅಭಿಮಾನವಿದ್ದುದರಿಂದ ಅದರಿಂದ ಪ್ರೇರಿತರಾಗಿ ಇಂಗ್ಲಿಷ್ ಎಂ.ಎ. ಪದವಿ ಗಳಿಸಿದರು. ಇದಲ್ಲದೆ ಬ್ರಿಟಿಷ್‌ ಕೌನ್ಸಿಲ್‌ ವಿದ್ಯಾರ್ಥಿವೇತನ ಪಡೆದು ಇಂಗ್ಲೆಂಡಿನ ಲೀಡ್ಸ್‌ ವಿಶ್ವವಿದ್ಯಾಲಯದಿಂದ ಭಾಷಾಶಾಸ್ತ್ರದಲ್ಲಿನ ಸ್ನಾತಕೋತ್ತರ ಪದವಿ ಮತ್ತು ಹೈದರಾಬಾದಿನ ಕೇಂದ್ರೀಯ ಇಂಗ್ಲಿಷ್‌ ಸಂಸ್ಥೆಯಿಂದ ಇಂಗ್ಲಿಷ್‌ ಅಧ್ಯಯನದ ಡಿಪ್ಲೊಮ ಪಡೆದರು. ಶಿಕ್ಷಣದ ಪ್ರತಿ ಹಂತದಲ್ಲಿಯೂ ಆಗ್ರ ಶ್ರೇಯಾಂಕ ಗಳಿಸಿದ ಕೀರ್ತಿ ಅವರದ್ದಾಗಿತ್ತು.
 
ಚಂದ್ರಶೇಖರ ಪಾಟೀಲರು ಉತ್ತರ ಕರ್ನಾಟಕದ ಸಾಂಸ್ಕೃತಿಕ ರಾಜಧಾನಿ ಎನಿಸಿಕೊಂಡಿರುವ ಧಾರವಾಡದಲ್ಲಿದ್ದಾಗಿನಿಂದಲೂ ಕನ್ನಡ ಪರ ಕಾಳಜಿ ವಹಿಸಿ, ಕನ್ನಡ ಪರ ಹೋರಾಟವನ್ನು ನಡೆಸುತ್ತಾ ಬಂದವರು. ಹಲವಾರು ಸಂಘಟನೆಗಳಲ್ಲಿ ಪ್ರಮುಖ ಪಾತ್ರವಹಿಸಿದವರು.
ರಾಜ್ಯ ಬಂಡಾಯ ಸಾಹಿತ್ಯ ಸಂಘಟನೆಯ ಸಂಚಾಲಕರಾಗಿ, ಅಖಿಲ ಕರ್ನಾಟಕ ಕೇಂದ್ರ ಕನ್ನಡ ಕ್ರಿಯಾಸಮಿತಿಯ ಪ್ರಧಾನ ಕಾರ್ಯದರ್ಶಿಯಾಗಿ, ಧಾರವಾಡ ನಾಟಕ ಕೂಟದ ಕಾರ್ಯದರ್ಶಿಯಾಗಿ, ಮ್ಯಾಳ ನಾಟಕ ಸಂಘದ ಕಾರ್ಯಾಧ್ಯಕ್ಷರಾಗಿ, ಕರ್ನಾಟಕ ವಿಶ್ವವಿದ್ಯಾಲಯದ ವಿಶ್ವಚೇತನ ಸಾಂಸ್ಕೃತಿಕ ವೇದಿಕೆಯ ನಿಯೋಜಕರಾಗಿ-ಹೀಗೆ ಹಲವು ಹತ್ತು ಸಂಘಟನೆಗಳಲ್ಲೂ, ಗೋಕಾಕ ಚಳವಳಿ ಮುಂತಾದ ಅನೇಕ ಜನಪರ ಚಳವಳಿಗಳಲ್ಲೂ ತಮನ್ನು ತೊಡಗಿಸಿಕೊಂಡವರು. ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ೨೬ದಿನ ೨೫ರಾತ್ರಿ ಜೈಲುವಾಸವನ್ನನುಭವಿಸಿದರು.
 
ಕನ್ನಡಕ್ಕಾಗಿ ದುಡಿಯುತ್ತಿದ್ದ ಚಂದ್ರಶೇಖರ ಪಾಟೀಲರನ್ನು ಕರ್ನಾಟಕ ಸರ್ಕಾರವು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ನೇಮಿಸಿತು. ೧೯೯೬-೯೯ರ ಅವಧಿಗೆ ಈ ಜವಾಬ್ಧಾರಿಯನ್ನು ನಿರ್ವಹಿಸುವುದರ ಜೊತೆಗೆ ೨೦೦೪-೦೮ ಅವಧಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ಚುನಾಯಿತ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದರು. ಅವರು ಪರಿಷತ್ತಿನ ಅಧ್ಯಕ್ಷರಾಗಿದ್ದಾಗ ಪರಿಷತ್ತನ್ನು ಪ್ರಬಲ ಹೋರಾಟದ ವೇದಿಕೆಯನ್ನಾಗಿ ರೂಪಿಸಿದ್ದು, ಪುಸ್ತಕ ಮಾರಾಟದ ಮೂಲಕ ಸಣ್ಣ ಪ್ರಮಾಣದ ಪ್ರಕಾಶಕರನ್ನು ಉತ್ತೇಜಿಸಲು ‘ಪುಸ್ತಕ ಸಂತೆ’ಯನ್ನು ಪ್ರತಿ ಶನಿವಾರ ಸಂಜೆ ಏರ್ಪಡಿಸಿದ್ದರ ಜೊತೆಗೆ ಆಯೋಜಿಸಿದ ಸಾಂಸ್ಕೃತಿಕ ಕಾರ್ಯಕ್ರಮಗಳು, ಶಿಕ್ಷಣ ಸಮಸ್ಯೆಯನ್ನು ಪರಿಹರಿಸಲು ಉನ್ನತ ಮಟ್ಟದ ಸಮಾಲೋಚನ ಸಭೆಯನ್ನು ಏರ್ಪಡಿಸಿದ್ದು, ಗಡಿನಾಡ ಕನ್ನಡಿಗರ ಸಮಸ್ಯೆಗಳ ಪರಿಹಾರಕ್ಕಾಗಿ ಅಧ್ಯಕ್ಷರ ಪುಸ್ತಕ ನಿಧಿಯನ್ನು ಪ್ರಾರಂಭಿಸಿದ್ದು, ಕನ್ನಡ ಭಾಷೆಗೂ ಶಾಸ್ತ್ರೀಯ ಸ್ಥಾನಮಾನ ದೊರೆಯುವಂತಾಗಲು ಹೋರಾಟ ನಡೆಸಿದ್ದು, ಪರಿಷತ್ತಿಗೆ ತನ್ನದೇ ಆದ ವೆಬ್‌ಸೈಟ್‌, ಅಂತರ್ಜಾಲ ಸೌಲಭ್ಯಗಳು, ಗಣಕ ಸಮ್ಮೇಳನದ ಆಯೋಜನೆ ಮುಂತಾದ ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿದರು.
 
ಕನ್ನಡ ನಾಡು-ನುಡಿ, ಸಂಸ್ಕೃತಿಯ ರಕ್ಷಣೆಗಾಗಿ ನಿರಂತರ ಹೋರಾಡುತ್ತಾ ಬಂದಿರುವ ಚಂಪಾರವರಿಗೆ ಬಂದಿರುವ ಪ್ರಶಸ್ತಿ ಗೌರವಗಳು ಹಲವಾರು. ಇವುಗಳಲ್ಲಿ ರಾಜ್ಯ ಸಾಹಿತ್ಯ ಅಕಾಡೆಮಿ ಬಹುಮಾನ (1960, 74, 76), ರಾಜ್ಯ ಸಾಹಿತ್ಯ ಅಕಾಡೆಮಿ ಗೌರವ ಪ್ರಶಸ್ತಿ, ದಿನಕರ ದೇಸಾಯಿ ಪ್ರತಿಷ್ಠಾನ ಪ್ರಶಸ್ತಿ, ಕರ್ನಾಟಕ ನಾಟಕ ಅಕಾಡೆಮಿ ಪ್ರಶಸ್ತಿ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕೆ.ವಿ. ಶಂಕರಗೌಡ ರಂಗಭೂಮಿ ಪ್ರಶಸ್ತಿ, ಸಂದೇಶ್‌ ಮಾಧ್ಯಮ ಪ್ರಶಸ್ತಿ, ಕರುನಾಡ ಭೂಷಣ ಪ್ರಶಸ್ತಿ, ಆಳ್ವಾಸ್‌ ನುಡಿಸಿರಿ ಪ್ರಶಸ್ತಿ ಮತ್ತು ಪಂಪ ಪ್ರಶಸ್ತಿ ಮುಂತಾದವುಗಳು ಪ್ರಮುಖವಾಗಿವೆ.2017 ರಲ್ಲಿ ಮೈಸೂರಿನಲ್ಲಿ ನಡೆದ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾಗಿದ್ದರು 2018 ಸಾಲಿನಲ್ಲಿ ಬಸವಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. 
 
ಚಂ.ಪಾ. ನಿಧನಕ್ಕೆ ಮುಖ್ಯಮಂತ್ರಿ ಬೊಮ್ಮಾಯಿ, ಕಸಾಪ ರಾಜ್ಯಾಧ್ಯಕ್ಷ ಡಾl ಮಹೇಶ ಜೋಷಿ, ಮಾಜಿ ಅಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು, ಉಡುಪಿ ಜಿಲ್ಲಾ ಕಸಾಪ ಅಧ್ಯಕ್ಷ ನೀಲಾವರ ಸುರೇಂದ್ರ ಅಡಿಗ, ನಡೈನ ಗಣ್ಯರನೇಕರು ಸಂತಾಪ ಸೂಚಿಸಿದ್ದಾರೆ
 
 
 
 
 
 
 
 
 
 
 

Leave a Reply