ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ : ಬಿಜೆಪಿ ಕಾರ್ಯಕರ್ತ ಆಧಾರಿತ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರ ಅವಿರತ ಶ್ರಮದ ಫಲವಾಗಿ ಉಡುಪಿ ಜಿಲ್ಲೆಯಲ್ಲಿ ಬಿಜೆಪಿಯ ಬೇರುಗಳು ಸದೃಢವಾಗಿವೆ. ಪಕ್ಷವನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುವ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿತ್ಯ ನಿರಂತರ ಪಕ್ಷದ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು.

ಮಂಗಳವಾರ ಹಿರಿಯಡ್ಕದ ಓಂತಿಬೆಟ್ಟು ಆರ್.ಎಸ್.ಬಿ ಸಭಾಂಗಣದಲ್ಲಿ ನಡೆದ ಬಿಜೆಪಿ ಕಾಪು ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

 ಬಿಜೆಪಿ ನೇತೃತ್ವದ ಕೇಂದ್ರ ಮತ್ತು ರಾಜ್ಯ ಸರಕಾರಗಳು ವಿವಿಧ ಜನಪರ ಯೋಜನೆಗಳ ಮೂಲಕ ಅತ್ಯುತ್ತಮ ಕೆಲಸ ಕಾರ್ಯಗಳನ್ನು ಮಾಡುತ್ತಿವೆ. ಕೊರೋನಾ ಮಹಾಮಾರಿಯ ವ್ಯವಸ್ಥಿತ ನಿರ್ವಹಣೆಯ ಜೊತೆಗೆ ಕೃಷಿಕರು, ಕಾರ್ಮಿಕರು, ಜನಸಾಮಾನ್ಯರ ಸಂಕಷ್ಟಕ್ಕೆ ಸ್ಪಂದಿಸಿರುವ ಸರಕಾರ ಎಲ್ಲಾ ಕಠಿಣ ಸವಾಲುಗಳನ್ನು ಸಮರ್ಥವಾಗಿ ನಿಭಾಯಿಸಿದೆ.

ಆದರೆ ವಿರೋಧ ಪಕ್ಷಗಳು ಮಾತ್ರ ಸರಕಾರದ ಯಾವುದೇ ಜನಪರ ಕಾರ್ಯಕ್ರಮಗಳಿಗೆ ಸಹಕಾರ ನೀಡದೇ ಕೇವಲ ಅಪಪ್ರಚಾರದಲ್ಲಿ ತೊಡಗಿಸಿಕೊಂಡಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಬಿಜೆಪಿ ಸರಕಾರದ ಯೋಜನೆ ಹಾಗೂ ಸಾಧನೆಗಳನ್ನು ಮನೆ ಮನೆಗಳಿಗೆ ತಲುಪಿಸುವ ಮೂಲಕ ಪಕ್ಷ ಸಂಘಟನೆಗೆ ಒತ್ತು ನೀಡಬೇಕು ಎಂದು ಕುಯಿಲಾಡಿ ಹೇಳಿದರು.

ಬಿಜೆಪಿ ಕಾಪು ಮಂಡಲಾಧ್ಯಕ್ಷ ಶ್ರೀಕಾಂತ್ ನಾಯಕ್ ವಿಶೇಷ ಕಾರ್ಯಕಾರಿಣಿ ಸಭೆಯ ಅಧ್ಯಕ್ಷತೆ ವಹಿಸಿ, ಪ್ರಾಸ್ತಾವಿಕ ನುಡಿಗಳನ್ನಾಡಿದರು. ಸಭೆಯಲ್ಲಿ ನಿರ್ಣಯಗಳ ಮಂಡನೆ, ಕಳೆದ ಮೂರು ತಿಂಗಳಲ್ಲಿ ನಡೆದ ಪಕ್ಷದ ಚಟುವಟಿಕೆಗಳು ಹಾಗೂ ಮುಂದಿನ ಮೂರು ತಿಂಗಳಲ್ಲಿ ಅನುಷ್ಠಾನಗೊಳಿಸಬೇಕಾದ ವಿವಿಧ ಕಾರ್ಯಕ್ರಮಗಳ ಬಗ್ಗೆ ಚಿಂತನ ಮಂಥನ ನಡೆಯಿತು.

ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯರಾದ ಗುರ್ಮೆ ಸುರೇಶ್ ಶೆಟ್ಟಿ, ಗೀತಾಂಜಲಿ ಸುವರ್ಣ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಕಾಪು ಮಂಡಲ ಪ್ರಭಾರಿ ರವೀಂದ್ರ ಮಡಿವಾಳ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್ ಶೆಟ್ಟಿ, ಜಿಲ್ಲಾ ಪಂಚಾಯತ್ ನಿಕಟಪೂರ್ವ ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಕಾಪು ಮಂಡಲ ನಿಕಟಪೂರ್ವ ಅಧ್ಯಕ್ಷ ಪ್ರಕಾಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಗೋಪಾಲಕೃಷ್ಣ ರಾವ್ ಮತ್ತು ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

ಮಂಡಲ ವಿಶೇಷ ಕಾರ್ಯಕಾರಿಣಿ ಸಭೆಯ ಸಮಾರೋಪದಲ್ಲಿ ಬಿಜೆಪಿ ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಮಂಗಳೂರು ಸಮಾರೋಪ ಭಾಷಣಗೈದರು.

 
 
 
 
 
 
 
 
 
 
 

Leave a Reply