ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ವಹಿಸಿ: ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ : ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದೊರೆಯುವ ನೆರವು ಮತ್ತು ಸೌಲಭ್ಯಗಳ ಕುರಿತಂತೆ, ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಯರಿಗೆ ಹೆಚ್ಚಿನ ಅರಿವು ಕಾರ್ಯಕ್ರಮಗಳನ್ನು ಆಯೋಜಿಸಿ, ನೊಂದ ಮಹಿಳೆಯರಿಗೆ ಸಕಾಲದಲ್ಲಿ ಅಗತ್ಯ ನೆರವು ದೊರಕುವಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಸಖಿ ಒನ್ ಸ್ಟಾಪ್ ಸೆಂಟರ್ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಸಖಿ ಒನ್ ಸ್ಟಾಪ್ ಕೇಂದ್ರದಲ್ಲಿ ದಾಖಲಾಗುವ ದೂರುಗಳನ್ನು ಆದಷ್ಟು ಬೇಗ ಇತ್ಯರ್ಥಗೊಳಿಸುವಂತೆ ತಿಳಿಸಿದರು.

ಸಮಾಲೋಚನೆ ಹಂತದಲ್ಲಿರುವ ಪ್ರಕರಣಗಳನ್ನು ಬೇಗ ಮುಕ್ತಾಯಗೊಳಿಸಿ, ನ್ಯಾಯಾಲಯದಲ್ಲಿರುವ ಪ್ರಕರಣಗಳ ಕುರಿತು ಆಗಾಗ ವಿಚಾರಿಸಿ, ಕೇಂದ್ರದಲ್ಲಿ ದಾಖಲಾಗುವ ಮಹಿಳೆಯರಿಗೆ ಚಿಕಿತ್ಸೆಯ ಅಗತ್ಯವಿದ್ದಲ್ಲಿ ಜಿಲ್ಲಾಸ್ಪತ್ರೆಗೆ ದೂರವಾಣಿ ಕರೆ ಮಾಡುವ ಮೂಲಕ ಶುಶ್ರೂಷಕರ ಸೇವೆಯನ್ನು ಪಡೆಯುವಂತೆ ತಿಳಿಸಿದ ಜಿಲ್ಲಾಧಿಕಾರಿ ಜಿ.ಜಗದೀಶ್, ರಾಷ್ಟ್ರೀಯ ಹೆದ್ದಾರಿಯಿಂದ ಬರಲು ಅನುಕೂಲವಾಗುವಂತೆ ಕೇಂದ್ರಕ್ಕೆ ಕಾಂಕ್ರೀಟ್ ಅಥವಾ ಇಂಟರ್‌ಲಾಕ್ ರಸ್ತೆ ನಿರ್ಮಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ಸಖಿ ಕೇಂದ್ರದಲ್ಲಿ ಫೆಬ್ರವರಿ 2021 ರಿಂದ ಜೂನ್ ವರೆಗೆ 42 ಕೌಟುಂಬಿಕ ದೌರ್ಜನ್ಯ, 1 ಸೈಬರ್ ಅಪರಾಧ, 2 ಕಾಣೆಯಾದ ಪ್ರಕರಣ ಹಾಗೂ ಇತರೆ 33 ಸೇರಿದಂತೆ ಒಟ್ಟು 78 ಪ್ರಕರಣಗಳು ದಾಖಲಾಗಿದ್ದು, 27 ಪ್ರಕರಣ ಇತ್ಯರ್ಥಗೊಂಡಿದೆ. ಹಾಗೂ ಉಳಿದ ಪ್ರಕರಣಗಳು ನ್ಯಾಯಾಲಯದಲ್ಲಿ ಮತ್ತು ಸಮಾಲೋಚನೆಯಲ್ಲಿವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಶೇಷಪ್ಪ ಮಾಹಿತಿ ನೀಡಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಎಎಸ್ಪಿ ಕುಮಾರಚಂದ್ರ ಮತ್ತಿತರರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply