ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ರಜತ ಸಂಭ್ರಮ

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು 25ನೇ ವರ್ಷಕ್ಕೆ ಪಾದಾರ್ಪಣೆಗೈದಿದ್ದು, ರಜತ ಮಹೋತ್ಸವದ ಸಂಭ್ರಮದಲ್ಲಿದೆ. ಈ ಪ್ರಯುಕ್ತ ಸಂಘವು ವರ್ಷಪೂರ್ತಿ ಒಟ್ಟು 25 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಉದ್ದೇಶಿಸಿದೆ ಎಂದು ರಜತ ಮಹೋತ್ಸವ ಸಮಿತಿಯ ಅಧ್ಯಕ್ಷ ಮುಹಮ್ಮದ್ ಶರೀಫ್ ಕಾರ್ಕಳ ತಿಳಿಸಿದ್ದಾರೆ.

ಉಡುಪಿ ಪತ್ರಿಕಾ ಭವನದಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತ ಸಂಘದ ಆಶ್ರಯದಲ್ಲಿ ಉಡುಪಿ ಪತ್ರಿಕಾ ಭವನ ಸಮಿತಿ ಹಾಗೂ ಕಾರ್ಕಳ, ಕಾಪು, ಕುಂದಾಪುರ, ಬೈಂದೂರು, ಬ್ರಹ್ಮಾವರ, ಹೆಬ್ರಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘಗಳ ಸಹಯೋಗದೊಂದಿಗೆ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲು ತೀರ್ಮಾ ನಿಸಲಾಗಿದೆ ಎಂದರು.

ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ರಾಜೇಶ್ ಶೆಟ್ಟಿ ಅಲೆವೂರು ಮಾತನಾಡಿ, ರಜತ ಮಹೋತ್ಸವ ಸಂಭ್ರಮದ ಉದ್ಘಾಟನಾ ಸಮಾರಂಭವು ಮಾ.19ರಂದು ಮಧ್ಯಾಹ್ನ 2ಗಂಟೆಗೆ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ನಡೆಯಲಿದೆ. ಈ ಸಂಭ್ರಮದಲ್ಲಿ ಸಂಘಟಿತರಾಗಿ ಪತ್ರಕರ್ತರ ಕ್ಷೇಮಾ ಭಿವೃದ್ಧಿ ನಿಧಿಯನ್ನು ಸ್ಥಾಪಿಸುವ ಗುರಿಯನ್ನು ಹೊಂದಲಾಗಿದೆ. ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಉದ್ಘಾಟನೆಗೊಂಡ ಎ.18ರ ದಿನವನ್ನು ಸ್ಥಾಪನಾ ದಿನವನ್ನಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದರು.

ರಜತ ಮಹೋತ್ಸವದ 25 ಕಾರ್ಯಕ್ರಮಗಳಲ್ಲಿ ಸಂಘದ ಡೈರಿ ಬಿಡುಗಡೆ, ಆರೋಗ್ಯ ಶಿಬಿರ, ದತ್ತಿ ಉಪನ್ಯಾಸ, ಸಂಸ್ಮರಣೆ ಹಾಗೂ ಪ್ರಶಸ್ತಿ ಪ್ರದಾನ, ಕಾರ್ಟೂನ್ ಮೇಳ, ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಕೂಟ, ಪತ್ರಕರ್ತರಿಗೆ ಕಾರ್ಯಾಗಾರ, ಪತ್ರಕರ್ತರಿಂದ ಗ್ರಾಮ ವಾಸ್ತವ್ಯ, ಫೋನ್ ಇನ್ ಕಾರ್ಯ ಕ್ರಮ, ಪತ್ರಿಕೋದ್ಯಮ ವಿದ್ಯಾರ್ಥಿಗಳಿಗಾಗಿ ಕಾರ್ಯಾಗಾರ, ಫೋಟೋಗ್ರಫಿ ಸ್ಪರ್ಧೆ, ಸ್ಮರಣ ಸಂಚಿಕೆ ಬಿಡುಗಡೆ, ಹಿರಿಯ ಪತ್ರಕರ್ತರಿಗೆ ಸನ್ಮಾನ, ಪತ್ರಕರ್ತರ ಸ್ನೇಹ ಕೂಟ, ಪತ್ರಕರ್ತರ ಸಾಂಸ್ಕೃತಿಕ ಕಾರ್ಯಕ್ರಮ, ಅಗಲಿದ ಪತ್ರಕರ್ತರ ಕುರಿತ ಪುಸ್ತಕ ರಚನೆ, ಸೈಕಲ್ ಜಾಥ, ರಾಜ್ಯಾಧ್ಯಕ್ಷರೊಂದಿಗೆ ಸಂವಾದ ಮುಖ್ಯವಾದವು ಎಂದರು.

ಡಿಸೆಂಬರ್ ತಿಂಗಳಲ್ಲಿ ರಜತ ಮಹೋತ್ಸವ ಸಮಾರೋಪ ಸಮಾರಂಭವನ್ನು ಆಯೋಜಿಸಲು ಉದ್ದೇಶಿಸಲಾಗಿದೆ. ಉಡುಪಿ ಬ್ರಹ್ಮಗಿರಿ ನಾಯರ್‌ಕೆರೆಯಲ್ಲಿ ಕಾರ್ಯಾಚರಿಸುತ್ತಿರುವ ಸಂಘದ ಕೇಂದ್ರ ಕಚೇರಿಯಾಗಿರುವ ಪತ್ರಿಕಾ ಭವನ ಕಟ್ಟಡವನ್ನು ವಿಸ್ತರಿಸುವ ಯೋಜನೆಯನ್ನು ಕೂಡ ಹಾಕಿಕೊಳ್ಳಲಾಗಿದ್ದು, ಒಟ್ಟು ರಜತ ಮಹೋತ್ಸವ ಕಾರ್ಯಕ್ರಮವನ್ನು 2-3ಕೋಟಿ ರೂ. ವೆಚ್ಚದಲ್ಲಿ ನಡೆಸಲು ತೀರ್ಮಾನಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಸುದ್ದಿಗೋಷ್ಠಿಯಲ್ಲಿ ಸಂಘದ ಪ್ರಧಾನ ಕಾರ್ಯದರ್ಶಿ ನಝೀರ್ ಪೊಲ್ಯ, ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯಕರ ಸುವರ್ಣ, ಕೋಶಾಧಿಕಾರಿ ಉಮೇಶ್ ಮಾರ್ಪಳ್ಳಿ, ಸಂಘದ ರಾಷ್ಟ್ರೀಯ ಸಮಿತಿ ಸದಸ್ಯ ಅರುಣ್ ಕುಮಾರ್ ಶಿರೂರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply