ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡಬೇಡಿ- ಜಿಲ್ಲಾಧಿಕಾರಿ ಜಿ.ಜಗದೀಶ್

ಉಡುಪಿ: ಜಿಲ್ಲೆಯಲ್ಲಿ ಎರಡು ಹಂತಗಳಲ್ಲಿ ನಡೆಯುವ ಗ್ರಾಮ ಪಂಚಾಯತ್ ಸಾರ್ವತ್ರಿಕ ಚುನಾವಣೆಯಲ್ಲಿ ಯಾವುದೇ ಕಾರಣಕ್ಕೂ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ಚುನಾವಣಾ ಕರ್ತವ್ಯಕ್ಕೆ ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಎಚ್ಚರದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಜಿ.ಜಗದೀಶ್ ಸೂಚಿಸಿದ್ದಾರೆ.

ಅವರು ಮಂಗಳವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ, ಗ್ರಾಮ ಪಂಚಾಯತ್ ಚುನಾವಣಾ ಕರ್ತವ್ಯಕ್ಕೆ
ನಿಯೋಜಿಸುವ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳಿಗೆ ಆಯೋಜಿಸಿದ್ದ ತರಬೇತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಮುಕ್ತ, ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸಲು, ಚುನಾವಣಾ ಆಯೋಗ
ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸುವುದರ ಜೊತೆಗೆ ಯಾವುದೇ ಸಂದರ್ಭದಲ್ಲಿಯೂ ಮಾದರಿ ನೀತಿ ಸಂಹಿತೆ ಉಲ್ಲಂಘನೆಗೆ ಅವಕಾಶ ನೀಡದೇ ಎಲ್ಲಾ ಚುನಾವಣಾಧಿಕಾರಿಗಳು ಮತ್ತು ಸಹಾಯಕ ಚುನಾವಣಾಧಿಕಾರಿಗಳು ಜವಾಬ್ದಾರಿ ಅರಿತು ಕರ್ತವ್ಯ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಚುನಾವಣಾ ಆಯೋಗವು ಕಾಲ ಕಾಲಕ್ಕೆ ನೀಡುವ ನಿರ್ದೇಶನಗಳನ್ನು ಪಾಲಿಸುವಂತೆ ಸೂಚಿಸಿದ ಜಿಲ್ಲಾಧಿಕಾರಿಗಳು, ಎಲ್ಲಾ ಚುನಾವಣಾಧಿಕಾರಿಗಳು ತಮಗೆ ವಹಿಸಲಾದ ಗ್ರಾಮ ಪಂಚಾಯತ್‌ಗಳಲ್ಲಿ ಕಚೇರಿ ತರೆದು ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಜಿಲ್ಲಾ ಪಂಚಾಯತ್ ಸಿಇಓ ಅವರಿಗೆ ಜಿಲ್ಲಾಧಿಕಾರಿ ತಿಳಿಸಿದರು.

ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ಉಪಸ್ಥಿತರಿದ್ದರು. ಜಿಲ್ಲಾ ಮಾಸ್ಟರ್ ಟ್ರೈನರ್ ‌ಗಳಾದ ಅಶೋಕ್ ಕಾಮತ್ ಮತ್ತು ಓ.ಆರ್.ಪ್ರಕಾಶ್ ತರಬೇತಿ ನೀಡಿದರು.

 
 
 
 
 
 
 
 
 
 
 

Leave a Reply