ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಉಡುಪಿ: ರಾಮಮಂದಿರ ನಿರ್ಮಾಣಕ್ಕೆ ನಾನು ದೇಣಿಗೆ ನೀಡಿದ್ದೇನೆ. ರಾಮ- ಕೃಷ್ಣ, ಪರಮೇಶ್ವರನ ಮೇಲೆ ನನಗೆ ಬಹಳ ಭಕ್ತಿ ಇದೆ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡುವೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. 

ನಾನು ನಮ್ಮ ಸಂಸ್ಕೃತಿ, ಭಕ್ತಿಯನ್ನು ಆಚರಿಸುತ್ತೇನೆ. ರಾಮಮಂದಿರ ವಿಚಾರದಲ್ಲಿ ಪಕ್ಷದ ನಡೆಯ ಬಗ್ಗೆ ನಾನು ಮಾತನಾಡಲ್ಲ. ನಾನು ಪಕ್ಷದ ಅಧ್ಯಕ್ಷೆ ಅಲ್ಲ ಅಥವಾ ದೊಡ್ಡ ಸ್ಥಾನದಲ್ಲೂ ಇಲ್ಲ. ನಾನು ದೈವೀ ಭಕ್ತಳು ಎಂದು ಪದೇ ಪದೇ ಹೇಳುತ್ತೇನೆ ಎಂದರು. 

ರಾಮ ಮಂದಿರಕ್ಕೆ ಒಂದಲ್ಲ ಒಂದು ದಿನ ಹೋಗಿಯೇ ಹೋಗುತ್ತೇನೆ. ರಾಮ ಮಂದಿರ ಅವರದ್ದೂ ಅಲ್ಲ ನಮ್ಮದೂ ಅಲ್ಲ. ಅಯೋಧ್ಯಾ ರಾಮ ಮಂದಿರ 140 ಕೋಟಿ ಜನರದ್ದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು.

ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ.

ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.

ಶ್ರೀಮಠದ ಪರ್ಯಾಯಕ್ಕೆ ಮುಖ್ಯಮಂತ್ರಿಯವರು 10 ಕೋಟಿ ರೂಪಾಯಿ ಬಿಡುಗಡೆ ಮಾಡಲು ಕ್ರಮ ವಹಿಸಿದ್ದಾರೆ. ಇದೇ ಮೊದಲ ಬಾರಿಗೆ ಉಡುಪಿ ಪರ್ಯಾಯ ಮಹೋತ್ಸವದಲ್ಲಿ ಕುಟುಂಬ ಸಮೇತ ಪಾಲ್ಗೊಳ್ಳುತ್ತಿರುವೆ. ಪರ್ಯಾಯ ಮಹೋತ್ಸವಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ತಿಳಿಸಿದರು.  

ವಿವಿಧ ಕಾರಣಗಳಿಂದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರು ಪರ್ಯಾಯ ಮಹೋತ್ಸವದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ. ಆದರೆ, ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಹೇಳಿದರು. 

ಕಳೆದ ನಾಲ್ಕೂವರೆ ವರ್ಷಗಳಿಂದ ಸುದ್ದಿಯಲ್ಲಿರದ ಬಿಜೆಪಿ ಸಂಸದ ಅನಂತಕುಮಾರ ಹೆಗಡೆಯವರು ಚುನಾವಣೆ ಸಮೀಪಿಸುತ್ತಿರುವಂತೆ ದಿಢೀರ್ ಮುನ್ನೆಲೆಗೆ ಬಂದಿದ್ದಾರೆ. ಅವರಿಗೆ ಕಾಂಗ್ರೆಸ್ ಮತ್ತು ಮುಖ್ಯಮಂತ್ರಿಯವರನ್ನು ಟೀಕಿಸುವ ಯಾವುದೇ ನೈತಿಕತೆ ಇಲ್ಲ ಎಂದರು.

ಬೆಳಗಾವಿಯ ಖಾನಾಪುರ ಕೂಡ ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಬರುತ್ತದೆ. ಆದರೆ, ಈವರೆಗೆ ಒಮ್ಮೆಯೂ ಸಂಸದರು ಭೇಟಿ ನೀಡಿಲ್ಲ. ಜನರ ಸಮಸ್ಯೆಗಳನ್ನು ಆಲಿಸಿಲ್ಲ. ಆದರೀಗ ಪ್ರಚೋದನಾತ್ಮಕ ಹೇಳಿಕೆಗಳನ್ನು ನೀಡುತ್ತ ಮುನ್ನಲೆಗೆ ಬರುತ್ತಿದ್ದಾರೆ. ಸಂಸದರಾಗಿ ಜವಾಬ್ದಾರಿ ಸ್ಥಾನದಲ್ಲಿರುವವರು ಜವಾಬ್ದಾರಿಯುತವಾಗಿ ಮಾತನಾಡುವುದೂ ಮುಖ್ಯ. ಮೊದಲಿನಿಂದಲೂ ಇಂತಹ ಹೇಳಿಕೆಗಳನ್ನು ನೀಡುವುದೇ ಅವರ ಕೆಲಸವಾಗಿದೆ ಎಂದರು. 

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನಗಳನ್ನು ಪಡೆಯಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿಶ್ವಾಸ ವ್ಯಕ್ತಪಡಿಸಿದರು.  

ರಾಜ್ಯದಲ್ಲೀಗ ಬಿಜೆಪಿಯ 25 ಸಂಸದರಿದ್ದರೂ ಕರ್ನಾಟಕದ ಯಾವುದೇ ಸಮಸ್ಯೆಗಳಿಗೆ ಸೂಕ್ತವಾಗಿ ಸ್ಪಂದಿಸಿಲ್ಲ. ರಾಜ್ಯದ ಜನರು ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದು, ಈ ಬಾರಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ವಿಶ್ವಾಸವಿದೆ ಎಂದು ಸಚಿವರು ಹೇಳಿದರು.

 
 
 
 
 
 
 
 
 
 
 

Leave a Reply