ಬಿಜೆಪಿ ಉಡುಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಕಳೆದ 10 ವರ್ಷಗಳ ಆಡಳಿತಾವಧಿಯಲ್ಲಿ ನೂರಾರು ಜನಪರ ಯೋಜನೆಗಳ ಸಹಿತ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಪ್ರಗತಿಯೊಂದಿಗೆ ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ ಮುಂಚೂಣಿ 3ನೆೇ ಸ್ಥಾನದತ್ತ ದಾಪುಗಾಲು ಹಾಕುತ್ತಿರುವ ಸಮೃದ್ಧ ಭಾರತದ ಕನಸು ನನಸಾಗಿದೆ ಎಂದು ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಉಡುಪಿ ಕುಂಜಿಬೆಟ್ಟು ಶಾರದಾ ಕಲ್ಯಾಣ ಮಂಟಪದ ಸಭಾಂಗಣದಲ್ಲಿ ನಡೆದ ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.

ಆರ್ಥಿಕ ಸ್ವಾವಲಂಬನೆಯ ಜೊತೆಗೆ ಸುಮಾರು 25 ಕೋಟಿ ಕುಟುಂಬಗಳನ್ನು ಬಡತನದ ರೇಖೆಯಿಂದ ಮೇಲೆತ್ತಲಾಗಿದೆ. ಹಳ್ಳಿ ಹಳ್ಳಿಗಳಿಗೆ ವಿದ್ಯುತ್, ಗ್ಯಾಸ್ ಸಂಪರ್ಕ, ಗ್ರಾಮೀಣ ರಸ್ತೆಗಳ ಅಭಿವೃದ್ಧಿ, ಆಯುಷ್ಮಾನ್ ಭಾರತ್, ಕಿಸಾನ್ ಸಮ್ಮಾನ್ ನಂತಹ ಅನೇಕ ಉದಾತ್ತ ಯೋಜನೆಗಳು ಜನಮಾನಸದಲ್ಲಿ ಹೊಸ ಭರವಸೆ ಮೂಡಿಸಿವೆ. ಬಡವರು, ಮಹಿಳೆಯರು, ಯುವ ಜನಾಂಗ ಮತ್ತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಬಿಜೆಪಿ ನೇತೃತ್ವದ ಕೇಂದ್ರ ಸರಕಾರ ಹಮ್ಮಿಕೊಂಡಿರುವ ದೂರದರ್ಶಿ ಯೋಜನೆಗಳು ಸರ್ವ ಸ್ಪರ್ಶಿ ಸರ್ವ ವ್ಯಾಪಿಯಾಗಿ ಸಕಾರಾತ್ಮಕ ಪರಿಣಾಮ ಬೀರುತ್ತಿವೆ.

ಗ್ಯಾರಂಟಿ ಯೋಜನೆಗಳನ್ನು ಘೋಷಿಸಿ ರಾಜ್ಯದ ಅಭಿವೃದ್ಧಿಯನ್ನು ಕಡೆಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರಕಾರಕ್ಕೆ ರಾಜ್ಯದಲ್ಲಿ ತೀವ್ರ ಬರಗಾಲವಿದ್ದರೂ ಪರಿಹಾರ ನೀಡಲು ಹಣವಿಲ್ಲ. ಇತ್ತೀಚೆಗೆ ಬಿಡುಗಡೆ ಮಾಡಿದ 324 ಕೋಟಿ ರೂ. ಪರಿಹಾರ ಧನದಲ್ಲಿ ಶೇ.75ರಷ್ಟು ಕೇಂದ್ರದ ಪಾಲು, ಶೇ.25ರಷ್ಟು ಮಾತ್ರ ರಾಜ್ಯದ ಪಾಲು ಎಂಬುದು ವಾಸ್ತವ. ಆಡಳಿತ ವಿರೋಧಿ ಅಲೆ ಎದುರಿಸುತ್ತಿರುವ ರಾಜ್ಯ ಸರ್ಕಾರ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆಯ ಪ್ರಹಸನಕ್ಕೆ ಮುಂದಾಗಿದೆ ಎಂದು ಅವರು ಟೀಕಿಸಿದರು.

ಕಿಸಾನ್ ಸಮ್ಮಾನ್ ಯೋಜನೆಯಲ್ಲಿ ರಾಜ್ಯದ 54 ಲಕ್ಷ ರೈತರಿಗೆ ಪ್ರತಿ ವರ್ಷ 6 ಸಾವಿರ ರೂ. ನೀಡಲಾಗುತ್ತಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಿಂದ 4 ಸಾವಿರ ರೂ. ನೀಡುತ್ತಿದ್ದರೂ, ದುರಾದೃಷ್ಟವಶಾತ್ ಸಿದ್ದರಾಮಯ್ಯ ಸರಕಾರ ರಾಜ್ಯದ ಪಾಲನ್ನು ಸ್ಥಗಿತಗೊಳಿಸಿದೆ. ರಾಜ್ಯ ಸರಕಾರ ಕೇವಲ ಕೇಂದ್ರವನ್ನು ದೂರುವುದರಲ್ಲೇ ಕಾಲಹರಣ ಮಾಡುತ್ತಿದೆ. ಇಂತಹ ಸಂಗತಿಗಳ ಜೊತೆಗೆ ಕೇಂದ್ರ ಸರಕಾರದ ಅಭಿವೃದ್ಧಿಪರ ಯೋಜನೆಗಳನ್ನು ಮನೆ ಮನೆಗೆ ತಲುಪಿಸುವ ಮೂಲಕ ಮುಂದಿನ ಲೋಕಸಭಾ ಚುನಾವಣೆಯಲ್ಲಿ 400ಕ್ಕೂ ಮಿಕ್ಕಿ ಸ್ಥಾನಗಳೊಂದಿಗೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮಗದೊಮ್ಮೆ ಸದೃಢ, ಸಮೃದ್ಧ ಭಾರತ ನಿರ್ಮಾಣಕ್ಕಾಗಿ ಆಡಳಿತದ ಚುಕ್ಕಾಣಿ ಹಿಡಿಯುವಂತೆ ಪಕ್ಷದ ಕಾರ್ಯಕರ್ತರು ಬದ್ಧತೆಯಿಂದ ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.

ಪಕ್ಷದ ಹಿರಿಯ ನಾಯಕರಾದ ಸೋಮಶೇಖರ ಭಟ್, ಬಿ.ಸುಧಾಕರ ಶೆಟ್ಟಿ, ಸಂಘದ ಹಿರಿಯರಾದ ಗೋಪಾಲ ಚೆಟ್ಟಿಯಾರ್ ಮಂಗಳೂರು ಹಾಗೂ ಪ್ರೇಮ ಪಡಿಯಾರ್ ಇವರ ನಿಧನದ ಬಗ್ಗೆ ಮೌನ ಪ್ರಾರ್ಥನೆಯೊಂದಿಗೆ ಪಕ್ಷದ ವತಿಯಿಂದ ಶ್ರದ್ಧಾಂಜಲಿ ಸಮರ್ಪಿಸಲಾಯಿತು. ನಿಕಟಪೂರ್ವ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸದಾನಂದ ಉಪ್ಪಿನಕುದ್ರು ಅಗಲಿದ ಗಣ್ಯರ ಕುರಿತು ಮಾಹಿತಿ ನೀಡಿದರು.

ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಮಾತನಾಡಿ ಪಕ್ಷದ ಕಾರ್ಯ ಪದ್ಧತಿ ಮತ್ತು ಸಂಘಟನಾತ್ಮಕ ವಿಚಾರಗಳ ಕುರಿತು ಮಾರ್ಗದರ್ಶನ ನೀಡಿದರು.

ಅಯೋಧ್ಯೆಯ ಭವ್ಯ ಶ್ರೀರಾಮ ಮಂದಿರ ಲೋಕಾರ್ಪಣೆ ಮತ್ತು ಬಿಜೆಪಿ ಹಿರಿಯ ಮುಖಂಡ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿರುವ ಕೇಂದ್ರ ಸರಕಾರ ಮತ್ತು ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆ ಸಲ್ಲಿಸುವ ಅಭಿನಂದನಾ ನಿರ್ಣಯವನ್ನು ಬಿಜೆಪಿ ದ.ಕ. ಜಿಲ್ಲಾ ಸಹ ಪ್ರಭಾರಿ ರಾಜೇಶ್ ಕಾವೇರಿ ಅವರು ಸಭೆಯಲ್ಲಿ ಮಂಡಿಸಿದರು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಅನುಮೋದಿಸಿದರು. ಈ ಸಂದರ್ಭದಲ್ಲಿ ಪಕ್ಷದ ಹಿರಿಯ ನಾಯಕಿ ಶೀಲಾ ಕೆ. ಶೆಟ್ಟಿ ಮತ್ತು ನಿಕಟಪೂರ್ವ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ರಾಜ್ಯ ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ, ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಕೆ.ರಾಘವೇಂದ್ರ ಕಿಣಿ, ದಿನಕರ ಶೆಟ್ಟಿ ಹೆರ್ಗ ಮತ್ತು ರೇಷ್ಮಾ ಉದಯಕುಮಾರ್ ಶೆಟ್ಟಿ ಇವರನ್ನು ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದಿಸಿ ಅಭಿನಂದಿಸಲಾಯಿತು. 

ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್ ಇವರು ಪಕ್ಷದ ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ಸವಿಸ್ತಾರ ಮಾಹಿತಿ ನೀಡಿದರು.

ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ಅಧ್ಯಕ್ಷತೆಯಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಇವರ ಉಪಸ್ಥಿತಿಯಲ್ಲಿ ನಡೆದ ಸಮಾರೋಪ ಸಮಾರಂಭದಲ್ಲಿ ಬಿಜೆಪಿ ಉಡುಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇವರು ಸಮಾರೋಪ ಭಾಷಣಗೈದರು.

ಈ ಸಂದರ್ಭದಲ್ಲಿ ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ ಸಹಿತ ಪಕ್ಷದ ಮುಖಂಡರು ಮತ್ತು ಜಿಲ್ಲಾ ಕಾರ್ಯಕಾರಿಣಿ ಸಭೆಯ ಅಪೇಕ್ಷಿತರು ಉಪಸ್ಥಿತರಿದ್ದರು.

ಜಿಲ್ಲಾ ಪ್ರಧಾನ ಕಾರ್ಯದರ್ಶಿ ರೇಷ್ಮಾ ಉದಯಕುಮಾರ್ ಶೆಟ್ಟಿ ವರ್ಗ ಗೀತೆ ಹಾಡಿದರು. ಕುಂದಾಪುರ ಮಂಡಲಾಧ್ಯಕ್ಷ ಶಂಕರ ಅಂಕದಕಟ್ಟೆ ವಂದೇ ಮಾತರಂ ಗೀತೆ ಹಾಡಿದರು.

ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ ಸ್ವಾಗತಿಸಿ, ಕೆ.ರಾಘವೇಂದ್ರ ಕಿಣಿ ಕಾರ್ಯಕ್ರಮ ನಿರೂಪಿಸಿದರು. ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್ ವಂದಿಸಿದರು.

ಸಾಮೂಹಿಕ ರಾಷ್ಟ್ರ ಗೀತೆಯೊಂದಿಗೆ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಸಮಾಪನಗೊಂಡಿತು. ಅಯೋಧ್ಯೆ ಶ್ರೀ ರಾಮ ಮಂದಿರದ ತೀರ್ಥ ಪ್ರಸಾದದೊಂದಿಗೆ ಸಾಮೂಹಿಕ ಸಹ ಭೋಜನ ನಡೆಯಿತು.

 
 
 
 
 
 
 
 
 
 
 

Leave a Reply