ಆತ್ಮ ವಿಶ್ವಾಸದಿಂದ ಪಕ್ಷ ಸಂಘಟಿಸೋಣ : ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

 

ಕಾರ್ಕಳ : ವಿಧಾನಸಭಾ ಚುನಾವಣೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಐದು ಕ್ಷೇತ್ರಗಳಲ್ಲಿ ಸೋತಿರಬಹುದು, ರಾಜ್ಯದಲ್ಲಿ ಪಕ್ಷ ಅಧಿಕಾರದಲ್ಲಿದ್ದು, ನಾವೆಲ್ಲ ಸೇರಿ ವಿಶ್ವಾಸ ಕಳೆದುಕೊಳ್ಳದೆ ಪಕ್ಷ ಸಂಘಟಿಸೋಣ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು.

ಶ್ರೀ ಬಾಹುಬಲಿ ಪ್ರವಚನ ಮಂದಿರದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಚಿವರು, ರಾಜ್ಯ ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಿ, ಮುಂದಿನ ಚುನಾವಣೆಯಲ್ಲಿ ಐದು ಕ್ಷೇತ್ರಗಳಲ್ಲೂ ಗೆಲುವಿನ ವಾತಾವರಣ ನಿರ್ಮಿಸೋಣ ಎಂದರು.

ರಾಹುಲ್ ಗಾಂಧಿ ಅವರು ನಡೆಸಿದ ಭಾರತ ಜೋಡೋ ಯಾತ್ರೆ ಯಶಸ್ವಿಯಾಗಿದ್ದು, ನಮ್ಮ ಕಣ್ಮುಂದಿದೆ. ದೇಶದ ಜನರು ಹೊಸತನವನ್ನು ಬಯಸಿದ್ದಾರೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೇರುಮಟ್ಟದಿಂದ ಕಟ್ಟಿದರೆ ಖಂಡಿತವಾಗಿಯೂ ಉತ್ತಮ ಫಲಿತಾಂಶ ಕಾಣುತ್ತೇವೆ ಎಂದು ಸಚಿವರು ವಿಶ್ವಾಸ ತುಂಬಿದರು. ಮುಂಬರುವ ಲೋಕಸಭೆ, ಜಿಲ್ಲಾ ಹಾಗೂ ತಾಲೂಕು ಪಂಚಾಯತ್ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಶ್ರಮಿಸಬೇಕು ಎಂದು ಹೇಳಿದರು.

ನಾನು ಕೂಡ 2013ರ ವಿಧಾನಸಭೆ ಹಾಗೂ 2014ರ ಲೋಕಸಭಾ ಚುನಾವಣೆಗಳಲ್ಲಿ ಸೋತಿದ್ದೆ, ಬಳಿಕ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದ ಫಲವಾಗಿ ಇಂದು ರಾಜ್ಯದಲ್ಲಿ ಸಚಿವೆಯಾಗಿ ನಿಮ್ಮ ಮುಂದೆ ನಿಂತಿರುವೆ. ಕಳೆದ ಚುನಾವಣೆಯಲ್ಲಿ ಸೋತ ಅಭ್ಯರ್ಥಿಗಳು ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟಿಸಬೇಕು ಎಂದು ಸಚಿವರು ಹೇಳಿದರು.

ಸಮಾರಂಭದಲ್ಲಿ ಕಾರ್ಕಳ ಕಾಂಗ್ರೆಸ್ ಕಾರ್ಯಕರ್ತರು ಸಚಿವರನ್ನು ಸನ್ಮಾನಿಸಿದರು. ಈ ವೇಳೆ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಮುಖ್ಯಮಂತ್ರಿ ಎಂ.ವೀರಪ್ಪ ಮೊಯಿಲಿ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಮುಖಂಡರಾದ ಉದಯ್ ಕುಮಾರ್ ಶೆಟ್ಟಿ ಸೇರಿದಂತೆ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

 
 
 
 
 
 
 
 
 
 
 

Leave a Reply