ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಸ್ಥಗಿತವಿಲ್ಲ

* ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟನೆ

ಬೆಂಗಳೂರು: ‌ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆ ಯಾವುದೇ ಕಾರಣಕ್ಕೂ ಸ್ಥಗಿತಗೊಳ್ಳುವುದಿಲ್ಲ. ನೋಂದಣಿ ಪ್ರಕ್ರಿಯೆ ನಿರಂತರವಾಗಿರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಸ್ಪಷ್ಟಪಡಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ಗೃಹಲಕ್ಷ್ಮಿ ಯೋಜನೆ ಸ್ಥಗಿತ ಎಂಬ ಮಾಹಿತಿ ಪ್ರಕಟವಾದ ಕುರಿತಂತೆ ಪ್ರತಿಕ್ರಿಯಿಸಿದ ಸಚಿವರು, ಕೆಲವರ ಅಚಾತುರ್ಯದಿಂದ ಈ ರೀತಿ ಆಗಿದ್ದು, ಇದು ನಿರಂತರವಾಗಿ ನಡೆಯುವ ಯೋಜನೆ. ಸಾಮಾಜಿಕ ಜಾಲತಾಣದಲ್ಲಿ ತಪ್ಪು ಮಾಹಿತಿ ಹರಡಿದವರಿಗೆ ನೋಟೀಸ್ ಜಾರಿ ಮಾಡುತ್ತೇವೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಸಚಿವರು ತಿಳಿಸಿದರು.  ಕುರಿತು ಇಲಾಖೆಯ ಕಾರ್ಯದರ್ಶಿ, ನಿರ್ದೇಶಕರೊಂದಿಗೆ ಸಭೆ ನಡೆಸಿದ್ದು, ಸಂಬಂಧಿಸಿದವರ ಮೇಲೆ ಕ್ರಮಕ್ಕೆ ಸೂಚಿಸಲಾಗಿದೆ ಎಂದರು.

* 63 ಲಕ್ಷ ಮಂದಿ ಖಾತೆಗೆ ಹಣ ಜಮಾ : ಇದುವರೆಗೂ ಸುಮಾರು 63 ಲಕ್ಷ ಮಹಿಳೆಯರ ಬ್ಯಾಂಕ್‌ ಖಾತೆಗೆ ಹಣ ಜಮಾ ಆಗಿದೆ ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್‌ ಮಾಹಿತಿ ಹಂಚಿಕೊಂಡರು. ಗೃಹಲಕ್ಷ್ಮಿ ಯೋಜನೆಯ ಒಟ್ಟು 1.28 ಕೋಟಿ ಫಲಾನುಭವಿಗಳ ಪೈಕಿ 1.12 ಕೋಟಿ ಫಲಾನುಭವಿಗಳು ಇದುವರೆಗೂ ತಮ್ಮ ಹೆಸರು ನೋಂದಾಯಿಸಿಕೊಂಡಿದ್ದು, ಈ ಪೈಕಿ 63 ಲಕ್ಷ ಮಹಿಳೆಯರಿಗೆ ಇದುವರೆಗೂ ಹಣ ಸಂದಾಯವಾಗಿದೆ ಎಂದರು.

ಕೆಲವೊಂದು ತಾಂತ್ರಿಕ ಕಾರಣಗಳಿಂದಾಗಿ ಬ್ಯಾಂಕ್‌ಗಳಲ್ಲಿ ಹಣ ಸಂದಾಯವಾಗುವುದು ತಡವಾಗಿದೆ.  ಇನ್ನೂ ನಾಲ್ಕೈದು ದಿನಗಳಲ್ಲಿ ಎಲ್ಲರಿಗೂ ಹಣ ವರ್ಗಾವಣೆ ಆಗಲಿದೆ ಎಂದು ಸಚಿವರು ತಿಳಿಸಿದರು.

 
 
 
 
 
 
 
 
 
 
 

Leave a Reply