ಸ್ವಯಂಪೇರಿತ ರಕ್ತದಾನ ಹಾಗೂ ರಕ್ತ ಗುಂಪಿನ ವರ್ಗೀಕರಣ ಶಿಬಿರ

ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಉಡುಪಿ ಜಿಲ್ಲಾ ಸಹಕಾರ ಯೂನಿಯನ್, ಉಡುಪಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಕೇಂದ್ರ, ಉಡುಪಿ ಪೂರ್ಣಪ್ರಜ್ಞ ಸಂಧ್ಯಾ ಕಾಲೇಜು, ರೆಡ್‌ಕ್ರಾಸ್ ಘಟಕ, ರೆಡ್ ರಿಬ್ಬನ್ ಕ್ಲಬ್, ಬಡಗಬೆಟ್ಟು ಕ್ರೇಡಿಟ್ ಕೋ ಆಪರೇಟಿವ್ ಸೊಸೈಟಿ ಹಾಗೂ ಉಡುಪಿ ಜಿಲ್ಲೆಯ ಸಮಸ್ತ ಸಹಕಾರ ಸಂಘಗಳ ಸಂಯುಕ್ತ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಸಹಕಾರ ಸಂಘಗಳ ನೌಕರರು ಹಾಗೂ ಸದಸ್ಯರುಗಳಿಂದ ಸ್ವಯಂಪೇರಿತ ರಕ್ತದಾನ ಹಾಗೂ ರಕ್ತ ಗುಂಪಿನ ವರ್ಗೀಕರಣ ಶಿಬಿರವನ್ನು ಬುಧವಾರ ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಮಿನಿ ಅಡಿಟೋರಿಯಂನಲ್ಲಿ ಆಯೋಜಿಸಲಾಗಿತ್ತು.

ಶಿಬಿರವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಬಿ.ಜಯಕರ ಶೆಟ್ಟಿ ಇಂದ್ರಾಳಿ ಮಾತನಾಡಿ, ಸಹಕಾರಿ ಕ್ಷೇತ್ರದಲ್ಲಿ ಪ್ರಥಮ ಬಾರಿಗೆ ಉಡುಪಿ ಮತ್ತು ಕುಂದಾಪುರದಲ್ಲಿ ಈ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ. ಇದರಲ್ಲಿ ಒಟ್ಟು 1000 ಯುನಿಟ್ ರಕ್ತ ಸಂಗ್ರಹಿಸುವ ಗುರಿಯನ್ನು ಹೊಂದಿದ್ದೇವೆ. ರಕ್ತದಾನ ಮತ್ತು ರಕ್ತದ ಅವಶ್ಯಕತೆಯ ಬಗ್ಗೆ ಸಹಕಾರಿ ಕ್ಷೇತ್ರದಲ್ಲಿ ಸಾಕಷ್ಟು ಜಾಗೃತಿಯನ್ನು ಕೂಡ ಮೂಡಿಸಲಾಗುತ್ತಿದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿ ಡಾ.ವೀಣಾ ಕುಮಾರ್ ಮಾತನಾಡಿ, ಜಿಲ್ಲೆಯಲ್ಲಿ ಸ್ವಯಂಪೇರಿತ ರಕ್ತ ನೀಡುವ ದಾನಿಗಳು ಹೆಚ್ಚಿನ ಸಂಖ್ಯೆ ಯಲ್ಲಿ ಇರುವುದರಿಂದ ಎಂದಿಗೂ ರಕ್ತದ ಕೊರತೆಯಾಗಿಲ್ಲ. ಆದರೆ ಕೋವಿಡ್ ಸಮಯದಲ್ಲಿ ಜನ ಆಸ್ಪತ್ರೆಗೆ ಬರಲು ಭಯಪಟ್ಟ ಹಿನ್ನೆಲೆಯಲ್ಲಿ ಅಲ್ಪ ಪ್ರಮಾಣ ದಲ್ಲಿ ಕೊರತೆ ಉಂಟಾಗಿತ್ತು. ಆದರೂ ಕೋವಿಡ್ ಅವಧಿಯಲ್ಲಿ ಜಿಲ್ಲಾಸ್ಪತ್ರೆಯ ರಕ್ತಕೇಂದ್ರ ಇಡೀ ರಾಜ್ಯದಲ್ಲೇ ಉತ್ತಮ ಸಾಧನೆ ಮಾಡಿದೆ ಎಂದರು.

ಉಡುಪಿ ಜಿಲ್ಲಾ ಸಹಕಾರ ಇಲಾಖೆಯ ಉಪನಿಬಂಧಕ ಪ್ರವೀಣ್ ನಾಯ್ಕ್, ಅವಿಭಜಿತ ದ.ಕ. ಜಿಲ್ಲಾ ಮೀನುಗಾರಿಕಾ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಡಿಸಿಸಿ ಬ್ಯಾಂಕ್ ನಿರ್ದೇಶಕ ದೇವಿಪ್ರಸಾದ್ ಶೆಟ್ಟಿ ಮುಖ್ಯ ಅತಿಥಿಗಳಾಗಿದ್ದರು. ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ.ಸುಕನ್ಯಾ ಮೇರಿ ಜೆ. ವಹಿಸಿದ್ದರು.

ಕಾಲೇಜಿನ ಎನ್‌ಎಸ್‌ಎಸ್ ಯೋಜನಾಧಿಕಾರಿ ರಮಾನಂದ ರಾವ್ ಸ್ವಾಗತಿಸಿದರು. ಸಂಸ್ಕೃತ ಉಪನ್ಯಾಸಕ ಡಾ.ರಾಮಕೃಷ್ಣ ಉಡುಪ ವಂದಿಸಿದರು. ಎನ್‌ಎಸ್‌ಎಸ್ ಯೋಜನಾಧಿಕಾರಿ ಶ್ರೀಲತಾ ಆಚಾರ್ಯ ನಿರೂಪಿಸಿದರು.

 
 
 
 
 
 
 
 
 
 
 

Leave a Reply